ಹೊಸಪೇಟೆ(ವಿಜಯನಗರ): ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಶುಕ್ರವಾರ ಹೊಸಪೇಟೆ ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿ ಉದ್ಘಾಟನೆ ಮಾಡಿದರು. ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಗಣ್ಯರು ತೆಂಗಿನ ಸಸಿಗಳನ್ನು ನೆಟ್ಟರು.
ಒಟ್ಟು ರೂ 4.6 ಕೋಟಿ ವೆಚ್ಚದಲ್ಲಿ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿ ನಿರ್ಮಿಸಲಾಗಿದೆ. 27 ಸೆಪ್ಟೆಂಬರ್ 2022 ರಂದು ಕಾಮಗಾರಿ ಪ್ರಾರಂಭಿಸಿ, 28 ಆಗಸ್ಟ್ 2023 ಕ್ಕೆ ಪೂರ್ಣಗೊಳಿಸಲಾಗಿದೆ. ನೂತನ ಜಿಲ್ಲಾ ಪೊಲೀಸ್ ಕಚೇರಿ ನಿರ್ಮಾಣಕ್ಕೆ ಒಟ್ಟು 3 ಎಕರೆ ಜಮೀನು ಮಂಜೂರು ಮಾಡಲಾಗಿದೆ. 1255 ಚದರ ಮೀಟರ್ ಜಾಗದಲ್ಲಿ ಕಚೇರಿ ಕಟ್ಟಡ ನಿರ್ಮಿಸಲಾಗಿದೆ. ಲೋಕೋಪಯೋಗಿ ಇಲಾಖೆಯಿಂದ ಕಾಮಗಾರಿ ಅನುಷ್ಠಾನಗೊಳಿಸಲಾಗಿದೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ, ಹೊಸಪೇಟೆ ಶಾಸಕ ಹೆಚ್.ಆರ್.ಗವಿಯಪ್ಪ, ಕೆ.ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್, ಬಳ್ಳಾರಿ ವಲಯದ ಐಜಿಪಿ ಲೋಕೇಶ್ಕುಮಾರ್, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ,ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸದಾಶಿವಪ್ರಭು.ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿಬಾಬು.ಬಿ.ಎಲ್ ಸೇರಿದಂತೆ ಇತರೆ ಮುಖಂಡರು ಇದ್ದರು.