
ಬೆಂಗಳೂರು–ಮಂಗಳೂರು–ಗೋವಾ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಚಾಲನೆ
Deprecated: htmlspecialchars(): Passing null to parameter #1 ($string) of type string is deprecated in /home/u407462654/domains/starfocustv.com/public_html/wp-includes/formatting.php on line 4802
Deprecated: htmlspecialchars(): Passing null to parameter #1 ($string) of type string is deprecated in /home/u407462654/domains/starfocustv.com/public_html/wp-includes/formatting.php on line 4802
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಅಭಿವೃದ್ಧಿಗೆ ₹94 ಕೋಟಿ ಅನುದಾನ.
ಮಂಗಳೂರು, ನ.13: ಬೆಂಗಳೂರು ಮತ್ತು ಕರಾವಳಿ ಕರ್ನಾಟಕದ ನಡುವಿನ ರೈಲು ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಬಹುನಿರೀಕ್ಷಿತ ಬೆಂಗಳೂರು–ಮಂಗಳೂರು–ಗೋವಾ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆಗೆ ಕೇಂದ್ರ ರೈಲ್ವೆ ಹಾಗೂ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಸಮಗ್ರ ಅಭಿವೃದ್ಧಿಗಾಗಿ ₹94 ಕೋಟಿ ಅನುದಾನ ಮಂಜೂರು ಮಾಡಿರುವುದಾಗಿ ಸಚಿವರು ಘೋಷಿಸಿದರು. ಈ ಅನುದಾನದಡಿ ನಿಲ್ದಾಣದ ಮೂಲಸೌಕರ್ಯವನ್ನು ಉನ್ನತೀಕರಿಸುವುದರ ಜೊತೆಗೆ ಪ್ರಯಾಣಿಕರಿಗೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ತಿಳಿಸಿದರು.
ಕರಾವಳಿ ಕರ್ನಾಟಕವನ್ನು ರಾಜ್ಯದ ರಾಜಧಾನಿ ಬೆಂಗಳೂರಿನೊಂದಿಗೆ ವೇಗದ ರೈಲು ಸಂಪರ್ಕದ ಮೂಲಕ ಬೆಸೆಯಬೇಕೆಂಬ ಬಹುಕಾಲದ ಕನಸು ಇಂದು ನನಸಾಗಿದೆ. ಪಶ್ಚಿಮ ಘಟ್ಟದ ವಿದ್ಯುದ್ದೀಕರಣ ಕಾಮಗಾರಿಯಲ್ಲಿ ಎದುರಾದ ಹಲವು ತಾಂತ್ರಿಕ ಸವಾಲುಗಳನ್ನು ಯಶಸ್ವಿಯಾಗಿ ನಿವಾರಿಸಿ ರೈಲು ಸಂಚಾರ ಆರಂಭಿಸಲಾಗಿದೆ ಎಂದು ಸಚಿವರು ಹೇಳಿದರು.
ಮಂಗಳೂರನ್ನು ನೈಋತ್ಯ ರೈಲ್ವೆ ವ್ಯಾಪ್ತಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಕುಂದಾಪುರ ರೈಲು ನಿಲ್ದಾಣದ ಅಭಿವೃದ್ಧಿಗಾಗಿ ನಿರಂತರವಾಗಿ ಪ್ರಯತ್ನಿಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಕಾರ್ಯವನ್ನು ಸಚಿವರು ಈ ಸಂದರ್ಭದಲ್ಲಿ ಅಭಿನಂದಿಸಿದರು.
850 ಕಿ.ಮೀ. ದೂರದ ವೇಗದ ರೈಲು ಸಂಪರ್ಕ
ಸುಮಾರು 850 ಕಿ.ಮೀ. ದೂರ ಕ್ರಮಿಸುವ ನೂತನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಬೆಂಗಳೂರು ಮತ್ತು ಗೋವಾ ರಾಜ್ಯಗಳ ನಡುವೆ ಆಧುನಿಕ ಹಾಗೂ ಆರಾಮದಾಯಕ ಪ್ರಯಾಣದ ಅನುಭವವನ್ನು ಒದಗಿಸಲಿದೆ. ಯಶವಂತಪುರದಿಂದ ಹೊರಡುವ ಈ ರೈಲು ಹಾಸನ, ಸಕಲೇಶಪುರ, ಮಂಗಳೂರು, ಉಡುಪಿ, ಮುರ್ಡೇಶ್ವರ, ಗೋಕರ್ಣ ಮತ್ತು ಕಾರವಾರ ಸೇರಿದಂತೆ ಪ್ರಮುಖ ನಗರಗಳು ಹಾಗೂ ಪ್ರವಾಸಿ ತಾಣಗಳ ಮೂಲಕ ಗೋವಾದ ಮಡಗಾಂವ್ ತಲುಪಲಿದೆ.
ಇತ್ತೀಚೆಗೆ ವಿದ್ಯುದ್ದೀಕರಣಗೊಂಡ ಸಕಲೇಶಪುರ–ಸುಬ್ರಹ್ಮಣ್ಯ ರಸ್ತೆ ಘಾಟ್ ವಿಭಾಗದ ಮೂಲಕ ರೈಲು ಸಂಚರಿಸುವುದು ಈ ಸೇವೆಯ ಮತ್ತೊಂದು ವಿಶೇಷತೆಯಾಗಿದೆ.
ಪ್ರವಾಸೋದ್ಯಮ ಮತ್ತು ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ
ಹೊಸ ರೈಲು ಸೇವೆಯಿಂದ ಬೆಂಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಪ್ರಯಾಣಿಕರಿಗೂ ದಕ್ಷಿಣ ಗೋವಾದ ಜನರಿಗೂ ಹೆಚ್ಚಿನ ಅನುಕೂಲವಾಗಲಿದೆ. ವಿದ್ಯಾರ್ಥಿಗಳು, ಉದ್ಯೋಗಿಗಳು, ಉದ್ಯಮಿಗಳು ಹಾಗೂ ವ್ಯಾಪಾರಸ್ಥರಿಗೆ ವೇಗದ ಮತ್ತು ಸುಗಮ ಪ್ರಯಾಣದ ಅವಕಾಶ ದೊರೆಯಲಿದೆ.
ವಿಶೇಷವಾಗಿ ಕರಾವಳಿ ಕರ್ನಾಟಕ ಮತ್ತು ಗೋವಾದ ಪ್ರಮುಖ ಪ್ರವಾಸಿ ತಾಣಗಳ ನಡುವಿನ ಸಂಪರ್ಕ ಸುಧಾರಿಸುವುದರಿಂದ ಪ್ರವಾಸೋದ್ಯಮದ ಬೆಳವಣಿಗೆಗೆ ಹೊಸ ಅವಕಾಶಗಳು ಸೃಷ್ಟಿಯಾಗಲಿವೆ. ವ್ಯಾಪಾರ, ಉದ್ಯಮ ಹಾಗೂ ಪ್ರಾದೇಶಿಕ ಆರ್ಥಿಕ ಚಟುವಟಿಕೆಗಳಿಗೂ ಈ ರೈಲು ಸೇವೆ ಪೂರಕವಾಗಲಿದೆ.
ಕಾರ್ಯಕ್ರಮದಲ್ಲಿ ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಸುರತ್ಕಲ್ ಶಾಸಕ ಡಾ. ಭರತ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
Deprecated: htmlspecialchars(): Passing null to parameter #1 ($string) of type string is deprecated in /home/u407462654/domains/starfocustv.com/public_html/wp-includes/formatting.php on line 4802











